22.50 ಕೋಟಿ ರೂ. ವೆಚ್ಚದ ರಸ್ತೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಶಾಸಕ ದಿನಕರ ಶೆಟ್ಟಿ

ಕುಮಟಾ: ಕುಮಟಾ ಮತ್ತು ಹೊನ್ನಾವರ ತಾಲೂಕಿನಲ್ಲಿ ಲೊಕೋಪಯೋಗಿ ಇಲಾಖೆಯಿಂದ ರಾಜ್ಯ ಹೆದ್ದಾರಿ ನಿರ್ಮಾಣಕ್ಕೆ ಮಂಜೂರಾದ 22.50 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಶಾಸಕ ದಿನಕರ ಶೆಟ್ಟಿ ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿದರು.

ಲೊಕೋಪಯೋಗಿ ಇಲಾಖೆಯ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ ತಾಲೂಕಿನ ಅಘನಾಶಿನಿ-ಕುಮಟಾ ಜಿಲ್ಲಾ ಮುಖ್ಯ ರಸ್ತೆ ನಿರ್ಮಾಣಕ್ಕೆ 3.50 ಕೋಟಿ ರೂ. ಹಾಗೂ ಹೊನ್ನಾವರ ತಾಲೂಕಿನ ಕುಮಟಾ-ಚಂದಾವರ-ಕೊಡಮಡಗು ರಸ್ತೆ ನಿರ್ಮಾಣಕ್ಕೆ 19 ಕೋಟಿ ರೂ. ಕಾಮಗಾರಿಗಳಿಗೆ ಶಾಸಕರು ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನಸಾಮಾನ್ಯರಿಗೆ ಮೂಲಸೌಕರ್ಯ ಒದಗಿಸಲು ಸಾಕಷ್ಟು ಹಣ ವ್ಯಯಿಸುತ್ತಿದೆ. ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಮೂಲೆ ಮೂಲೆಗಳಲ್ಲಿ ಸಾಕಷ್ಟು ರಸ್ತೆಗಳನ್ನು ನಿರ್ಮಿಸಲಾಗಿದ್ದು, ಅಘನಾಶಿನಿ-ತದಡಿ ಧಕ್ಕೆ ನಿರ್ಮಾಣಕ್ಕೆ 20 ಕೋಟಿ ರೂ. ಹಣ ಸಣ್ಣ ನೀರಾವರಿ ಇಲಾಖೆಯಿಂದ ಮಂಜೂರಾಗಿದ್ದು, ಸದ್ಯದಲ್ಲಿಯೇ ಟೆಂಡರ್ ಕರೆದು ಕಾಮಗಾರಿಗೆ ಚಾಲನೆ ನೀಡಲಾಗುತ್ತದೆ.

ಡಾಕ್ ರಸ್ತೆಯು ಹದಗೆಟ್ಟು ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗಿರುವುದನ್ನು ಗಮನಿಸಿ, 1.2 ಕೋಟಿ ರೂ. ವೆಚ್ಚದಲ್ಲಿ ಸಿಮೆಂಟ್ ರಸ್ತೆ ನಿರ್ಮಿಸಿ ಜನತೆಗೆ ಅನುಕೂಲ ಕಲ್ಪಿಸಲಾಗಿದೆ. ರೈತರ ಜಮೀನುಗಳಿಗೆ ಉಪ್ಪು ನೀರು ನುಗ್ಗದಂತೆ ಖಾರ್ಲ್ಯಾಂಡ್ ನಿರ್ಮಾಣಕ್ಕೆ ಹಣ ಮಂಜೂರಾಗಿದೆ. ಅದನ್ನು ಶೀಘ್ರದಲ್ಲಿಯೇ ಟೆಂಡರ್ ಕರೆಯಲಾಗುತ್ತದೆ. ಕ್ಷೇತ್ರದಾದ್ಯಂತ ಸಾಕಷ್ಟು ಪ್ರಮಾಣದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದೆ. ರಸ್ತೆ ನಿರ್ಮಾಣಕ್ಕೆ ಲೊಕೋಪಯೋಗಿ ಇಲಾಖೆಯ ಸಚಿವ ಸಿ.ಸಿ.ಪಾಟೀಲ್ ಅನುದಾನ ನೀಡಿದ್ದು, ಗುಣಮಟ್ಟದ ಕಾಮಗಾರಿ ನಡೆಸುವಂತೆ ಇಲಾಖೆ ಅಧಿಕಾರಿಗಳು ಹಾಗೂ ಗುತ್ತಿಗೆದಾರನಿಗೆ ಸೂಚನೆ ನೀಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ, ಮಂಲಾಧ್ಯಕ್ಷ ಹೇಮಂತಕುಮಾರ ಗಾಂವಕರ, ಕೆ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಗಜಾನನ ಪೈ, ಕಾಗಾಲ ಗ್ರಾ.ಪಂ ಅಧ್ಯಕ್ಷ ಶಶಿಕಾಂತ ನಾಯ್ಕ, ಕತಗಾಲ ಗ್ರಾ.ಪಂ ಉಪಾಧ್ಯಕ್ಷ ಶ್ರೀಧರ ಪೈ, ನಿಕಟಪೂರ್ವ ಮಂಡಲಾಧ್ಯಕ್ಷ ಕುಮಾರ ಮಾರ್ಕಾಂಡೆ, ಲೊಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಸುದರ್ಶನ ಹೊನ್ನಾವರ, ಸಹಾಯಕ ಅಭಿಯಂತರ ಸೋಮನಾಥ ಭಂಡಾರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೀನ್ ದಯಾಳ ವಿದ್ಯುತ್ತೀಕರಣ ಯೋಜನೆಯ ಮೂಲಕ ಮೇದಿನಿ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿತ್ತು. ಆದರೆ ಹಿಂದಿನ ಶಾಸಕರು ತಾನೇ ಹಣ ಮಂಜೂರಿ ಮಾಡಿಸಿ, ವಿದ್ಯುತ್ ಸಂಪರ್ಕ ನೀಡಿದ್ದೇನೆ ಎಂದು ಸುಳ್ಳು ಪ್ರಚಾರ ಗಿಟ್ಟಿಸಿಕೊಂಡಿದ್ದಾರೆ. ನನ್ನ ಅವಧಿಯಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳನ್ನು ಜನರ ಬಾಯಿಯಿಂದಲೇ ಕೇಳುತ್ತಿದ್ದೇನೆ.

– ದಿನಕರ ಶೆಟ್ಟಿ, ಕುಮಟಾ-ಹೊನ್ನಾವರ ಶಾಸಕ