ಕಾರವಾರ: ಉತ್ತರಕನ್ನಡ ಜಿಲ್ಲೆಯಾದ್ಯಂತ ಸೆ. 5 ರಿಂದ 21ರವರೆಗೆ ರಾಷ್ಟ್ರೀಯ ಕುಷ್ಟರೋಗ ನಿರ್ಮೂಲನ ಕಾರ್ಯಕ್ರಮದಡಿ ಕುಷ್ಟರೋಗ ಪ್ರಕರಣಗಳ ಪತ್ತೆ ಹಚ್ಚುವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಉತ್ತರಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ಕುಷ್ಟರೋಗ ನಿರ್ಮೂಲನ ಕಾರ್ಯಕ್ರಮದಡಿ ಕುಷ್ಟರೋಗ ಪ್ರಕರಣಗಳ ಪತ್ತೆ ಹಚ್ಚುವ ಅಭಿಯಾನದ ಮಾಹಿತಿ, ಆರೋಗ್ಯ ಶಿಕ್ಷಣ ಸಂವಹನದ ಭಿತ್ತಿ ಪತ್ರ, ಬ್ಯಾನರ್ ಹಾಗೂ ಕರಪತ್ರಗಳನ್ನು ಜಿಲ್ಲಾಪಂಚಾಯತ್ ಸಭಾಭವನದಲ್ಲಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಿಯಾಂಗಾ ಎಂ. ಬಿಡುಗಡೆಗೊಳಿಸಿದರು.
ಈ ಅಭಿಯಾನದ ಅಂಗವಾಗಿ ಆಶಾ ಕಾರ್ಯಕರ್ತೆಯರು ಹಾಗೂ ಪುರುಷ ಸ್ವಯಂ ಸೇವಕರು ಜಿಲ್ಲೆಯಾದ್ಯಂತ ಮನೆ ಮನೆಗಳಿಗೆ ಭೇಟಿ ನೀಡಿ ಚರ್ಮರೋಗದ ತಪಾಸಣೆ ನಡೆಸಿ, ಕುಷ್ಟರೋಗದ ಲಕ್ಷಣಗಳಿರುವ ಶಂಕಿತ ಪ್ರಕರಣಗಳನ್ನು ಗುರುತಿಸಲು ಕ್ಷೇತ್ರ ಭೇಟಿ ಸಮಯದಲ್ಲಿ ತಂಡದವರಿಗೆ ಸಾರ್ವಜನಿಕರು ಸಹಕರಿಸಬೇಕು ಹಾಗೂ ತಪಾಸಣಾ ಅಭಿಯಾನ ಮುಗಿದ ನಂತರ ಶಂಕಿತ ಕುಷ್ಟರೋಗ ಲಕ್ಷಣಗಳಿರುವ ಪ್ರಕರಣಗಳನ್ನು ಪ್ರಾಥಮಿಕ ಆರೋಗ್ಯಕೇಂದ್ರ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಶಿಬಿರಗಳನ್ನು ಏರ್ಪಡಿಸಿ, ಖಚಿತ ಕುಷ್ಟರೋಗಿಗಳಿಗೆ ಎಮ್.ಡಿ.ಟಿ. ಔಷಧಿಯ ಮೂಲಕ ಚಿಕಿತ್ಸೆಯನ್ನು ನೀಡಲಾಗುವುದು.
37ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕವು ಜಿಲ್ಲೆಯಾದ್ಯಂತ ಹಮ್ಮಿಕೊಂಡಿದ್ದು, ನೇತ್ರದಾನದ ಮಹತ್ವದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದ್ದು, ನೇತ್ರದಾನದ ನೊಂದಣಿ ಮತ್ತು ಹೆಚ್ಚಿನ ಮಾಹಿತಿಗಾಗಿ ಜೀವ ಸಾರ್ಥಕತೆ ವೆಬ್‌ಸೈಟ್ https://www.jeevasarthakate.karnataka.gov.in ಗೆ ಅಥವಾ ಹತ್ತಿರ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಥವಾ ಆರೋಗ್ಯ ಸಹಾಯವಾಣಿ 104 ಗೆ ಕರೆ ಮಾಡಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಪ್ರೇರಿತರಾಗಿ ನೋಂದಣಿ ಮಾಡಿಕೊಳ್ಳುವಂತೆ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಿಯಾಂಗಾ ಎಮ್. ಕರೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶರದ ನಾಯಕ, ಜಿಲ್ಲಾ ಕುಷ್ಟರೋಗ ನಿವಾರಣಾಧಿಕಾರಿ ಡಾ. ಶಂಕರರಾವ್, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ. ರಮೇಶ್‌ರಾವ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸವರಾಜ ಎಸ್. ಕನ್ನಕ್ಕನವರ, ಡಿ.ಪಿ.ಸಿ ಬಸವರಾಜ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.