ಜಮ್ಮು ಕಾಶ್ಮೀರ: ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಜೈಷ್–ಎ–ಮೊಹಮ್ಮದ್ (ಜೆಇಎಂ) ಸಂಘಟನೆಯ ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎನ್ ಕೌಂಟರ್ ಆದ ಉಗ್ರರನ್ನು ಸೋಪೋರ್‌ನ ಮೊಹಮ್ಮದ್ ರಫಿ ಮತ್ತು ಪುಲ್ವಾಮದ ಕೈಸರ್ ಅಶ್ರಫ್ ಎಂದು ಗುರುತಿಸಲಾಗಿದೆ. ಎನ್‌ಕೌಂಟರ್ ವೇಳೆ ಓರ್ವ ನಾಗರಿಕ ಗಾಯಗೊಂಡಿದ್ದಾನೆ.
ಬುಧವಾರ ರಾತ್ರಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುವ ವೇಳೆ ಸೋಪೋರ್ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದೆ. ಈ ಇಬ್ಬರು ಜೆಇಎಂ ಉಗ್ರ ಸಂಘಟನೆಗೆ ಸೇರಿದವರಾಗಿದ್ದು, ನಾಗರಿಕರ ಮೇಲೆ ದಾಳಿ ನಡೆಸಲು ಪ್ಲಾನ್ ಮಾಡಿದ್ದರು. ಇವರಿಬ್ಬರು ಹಲವು ಭಯೋತ್ಪಾದಕ ಪ್ರಕರಣಗಳಲ್ಲಿ ಶಾಮೀಲಾಗಿದ್ದರು ಎಂದು ಎಡಿಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.