ಕೆಪಿಟಿಸಿಎಲ್ ಪರೀಕ್ಷಾ ಅಕ್ರಮದ ಕಿಂಗ್‌ಪಿನ್‌ ಅರೆಸ್ಟ್.!

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಅಭಿಯಂತರ ಹುದ್ದೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದು ಬಂಧಿತರ ಸಂಖ್ಯೆ 13 ಕ್ಕೇರಿದೆ.

ಗೋಕಾಕ ತಾಲೂಕಿನ ಸಂಜೀವ ಲಕ್ಷ್ಮಣ ಭಂಡಾರಿ ಬಂಧಿತ ಕಿಂಗ್ ಪಿನ್. ಆರೋಪಿಯನ್ನು ಪೊಲೀಸರು ಗೋಕಾಕಿನ ಪ್ರಿನ್ಸಿಪಲ್ ಜೆಎಂಎಫ್‌ಸಿ ಕೋರ್ಟ್ ಗೆ ಹಾಜರು ಪಡಿಸಿದ್ದು ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯನ್ನು 7 ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.

ಘಟನೆಯ ಹಿನ್ನೆಲೆ

ಆ. 07 ರಂದು ಕೆಪಿಟಿಸಿಎಲ್‌ನ ಕಿರಿಯ ಅಭಿಯಂತರ ಹುದ್ದೆಯ ನೇಮಕಾತಿ ಪರೀಕ್ಷೆ ಗೋಕಾಕ್ ನ ಜೆಎಸ್‌ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿತ್ತು. ಪರೀಕ್ಷಾ ಕೇಂದ್ರದಲ್ಲಿ ಆರೋಪಿ ಸಿದ್ದಪ್ಪ ಕೆಂಪಣ್ಣ ಮದಿಹಳ್ಳಿ ಎಂಬಾತ ಸ್ಮಾರ್ಟ್ ವಾಚ್‌ನ ಕ್ಯಾಮೆರಾ ಮೂಲಕ ಪ್ರಶ್ನೆ ಪತ್ರಿಕೆಯ ಫೋಟೋ ತೆಗೆದು ಟೆಲಿಗ್ರಾಂ ಮೂಲಕ ಪ್ರಮುಖ ಆರೋಪಿ ಸಂಜೀವ ಭಂಡಾರಿಗೆ ರವಾನಿಸಿದ್ದ. ಅಕ್ರಮದ ಕುರಿತು ಗೋಕಾಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಸಂಜೀವ ಭಂಡಾರಿ ತಲೆಮರೆಸಿಕೊಂಡಿದ್ದ. ಅಲ್ಲದೇ ವಕೀಲರ ಮೂಲಕ ಎರಡು ಬಾರಿ ಜಾಮೀನಿಗಾಗಿ ಸಂಜು ಭಂಡಾರಿ ಅರ್ಜಿ ಸಲ್ಲಿಸಿದ್ದ. ಆದರೆ ನ್ಯಾಯಾಲಯ ಆರೋಪಿಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿ 7 ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.

ಆರೋಪಿ ಸಂಜೀವ ಭಂಡಾರಿ ಪರೀಕ್ಷಾರ್ಥಿಗಳಿಗೆ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಬ್ಲೂಟೂತ್‌ ಡಿವೈಸ್ ಗಳನ್ನು ರವಾನಿಸುತ್ತಿದ್ದ. ಇದೀಗ ಪೊಲೀಸರು ಬ್ಲೂಟೂತ್ ಡಿವೈಸ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿ ಸಂಜೀವ ಪೊಲೀಸ್ ಪೇದೆಯ ಮಗನಾಗಿದ್ದು, ಈ ಹಿಂದೆ ನಡೆದ ಪೊಲೀಸ್ ಪೇದೆ ಪರೀಕ್ಷೆ ಅಕ್ರಮದಲ್ಲೂ ಜೈಲಿಗೆ ಹೋಗಿದ್ದ. ನಂತರ ಜಾಮೀನಿನ ಮೇಲೆ ಹೊರಬಂದು ತನ್ನ ಹಳೆಯ ಚಾಳಿ ಮುಂದುವರಿಸಿದ್ದ ಎಂದು ತಿಳಿದು ಬಂದಿದೆ. ಹೆಚ್ಚಿನ ತನಿಖೆ ಮುಂದುವರೆದಿದೆ.