ಕಾರವಾರ: ಶಿಕ್ಷಕರ ದಿನಾಚರಣೆಯನ್ನು ಕೇವಲ ಶಿಕ್ಷಕರ ಸಮ್ಮುಖದಲ್ಲಿ ಆಚರಿಸದೆ, ಶಿಕ್ಷಕರು ಹಾಗೂ ಮಕ್ಕಳನ್ನು ಜೊತೆಗೂಡಿಸಿ ಕಾರ್ಯಕ್ರಮದ ಮೂಲಕ ಮಕ್ಕಳಿಗೆ ಶಿಕ್ಷಕರ ಮಹತ್ವ ಹಾಗೂ ಶಿಕ್ಷಕರ ಗೌರವದ ಕುರಿತು ಅರಿವು ಮೂಡಿಸುವಂತಾಗಬೇಕು ಎಂದು ಕಾರವಾರ-ಅಂಕೋಲಾ ಶಾಸಕಿ ರೂಪಾಲಿ ನಾಯ್ಕ ಹೇಳಿದರು.
ನಗರದ ಜಿಲ್ಲಾ ರಂಗಮಂದಿರದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಗುರುವಿನ ಜ್ಞಾನ ಹಾಗೂ ಸರಿಯಾದ ಮಾರ್ಗದರ್ಶನದಿಂದ ಎಂತಹ ವ್ಯಕ್ತಿಯಾದರೂ ಉನ್ನತ ಮಟ್ಟಕ್ಕೇರಲು ಸಾಧ್ಯ. ಶಿಕ್ಷಕರಿಗೆ ಸರ್ಕಾರದಿಂದ ಒದಗಿಸಬೇಕಾದ ಸೌಲಭ್ಯಗಳ ಕುರಿತು ಈಗಾಗಲೇ ಗಮನಕ್ಕೆ ತರಲಾಗಿದ್ದು, ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು, ಹಾಗೂ ಶಿಕ್ಷಕರ ವಸತಿಗಾಗಿ 4 ಕೋಟಿ ರೂ. ಅನುದಾನದಲ್ಲಿ ಕಾರವಾರದಲ್ಲಿ ಗುರುಭವನವನ್ನು ನಿರ್ಮಿಸಲಾಗುತ್ತಿದೆ ಎಂದರು.
ಸಹಾಯಕ ಆಯುಕ್ತೆ ಜಯಲಕ್ಷ್ಮೀ ರಾಯಕೋಡ ಮಾತನಾಡಿ, ಶಿಕ್ಷಕಕನಿಗೆ ಉತ್ತಮ ಗೌರವ ಸಿಗುವುದು ಆತನ ಪಾಠ ಪ್ರವಚನದಿಂದಲ್ಲ, ಉತ್ತಮ ವರ್ತನೆ ಹಾಗೂ ನಡತೆಯಿಂದ. ಶಿಕ್ಷಕರು ಮಗುವಿನಲ್ಲಿ ಅಡಕವಾಗಿರುವ ಪ್ರತಿಭೆಯನ್ನು ಗುರುತಿಸಿ, ಸರಿಯಾದ ಮಾರ್ಗದರ್ಶನ ನೀಡಬೇಕು. ಜಿಲ್ಲೆಯಲ್ಲಿ ಮಕ್ಕಳ ಆತ್ಮಹತ್ಯೆ ಅತಿ ಹೆಚ್ಚು ಸಂಖ್ಯೆಯಲ್ಲಿ ಕಂಡು ಬರುತ್ತಿದ್ದು, ಇದಕ್ಕೆ ಮಕ್ಕಳ ಸೂಕ್ಷ್ಮ ಮನಸ್ಥಿತಿಯೇ ಕಾರಣ. ಮುಂದಿನ ದಿನಗಳಲ್ಲಿ ಈ ರೀತಿಯಾಗದಂತೆ ತಡೆಗಟ್ಟಲು ಪಾಲಕರು ಹಾಗೂ ಶಿಕ್ಷಕರು ಮಕ್ಕಳಲ್ಲಿ ಮನೋಬಲ ಹಾಗೂ ಆತ್ಮಸ್ಥೈರ್ಯ ಬೆಳೆಸುವಂತಾಗಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೇಕರ ಮಾತನಾಡಿ, ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿದ್ದಲ್ಲಿ ಭವಿಷ್ಯದಲ್ಲಿ ಉತ್ತಮ ಪ್ರಜೆಯಾಗಲು ಸಾಧ್ಯ. ಶಿಕ್ಷಣ ಕ್ಷೇತ್ರಕ್ಕೆ ತಲುಪಬೇಕಾದ ಸೌಲಭ್ಯಗಳನ್ನು ತಲುಪಿಸಲು ಸಹಕಾರ ನೀಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಕಾರವಾರ ತಾಲೂಕಿನ ಸರಕಾರಿ ಪ್ರೌಡ ಶಾಲಾ ನಿವೃತ್ತ ಶಿಕ್ಷಕರಿಗೆ, ನಿವೃತ್ತ ಅನುದಾನಿತ ಶಿಕ್ಷಕರಿಗೆ, ಸರಕಾರಿ ಪ್ರಾಥಮಿಕ ಶಾಲಾ ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ಬಾಲಪ್ಪನವರ ಆನಂದಕುಮಾರ, ಅಂಕೋಲಾ ಅರ್ಬನ್ ಕೋ ಆಪರೆಟಿವ್ ಬ್ಯಾಂಕ್ ಅಧ್ಯಕ್ಷ ಭಾಸ್ಕರ್ ನಾರ್ವೇಕರ, ಶಿರಸಿ ಕೆ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕಪ್ರಕಾಶ ಗುನಗಿ, ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿ, ಸಿಬ್ಬಂದಿ, ತಾಲೂಕಾ ಪ್ರಾಥಮಿಕ ಹಾಗೂ ಪ್ರೌಡ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಕ್ಷೇತ್ರ ಸಮನ್ವಯಾಧಿಕಾರಿಗಳು ಮುಂತಾದವರು ಇದ್ದರು.