ಕಾರವಾರ: ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿರುವ ಹಿನ್ನೆಲೆಯಲ್ಲಿ ಸೆ. 7 ರಿಂದ 24 ಗಂಟೆ ರೆಡ್ ಅಲರ್ಟ್ ಹಾಗೂ ಬಳಿಕ 48 ಗಂಟೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಎಚ್ಚರ ವಹಿಸುವಂತೆ ಹಾಗೂ ತಾಲೂಕಾಡಳಿತಗಳು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮುನ್ಸೂಚನೆ ನೀಡಿದ್ದಾರೆ.
ಈ ಬಗ್ಗೆ ಮಂಗಳವಾರ ಹೇಳಿಕೆ ನೀಡಿರುವ ಅವರು ಸೆ. 7 ಅತ್ಯಂತ ಭಾರೀ ಮಳೆ ಬೀಳುವ ಸೂಚನೆಯನ್ನು ಬೆಂಗಳೂರಿನ ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಮಾಹಿತಿ ನೀಡಲಾಗಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಸೆ. 8-10 ರವರೆಗೆ ಭಾರೀ ಮಳೆಯ ಸೂಚನೆ ನೀಡಿರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಈ ಸಮಯದಲ್ಲಿ ಅಪಾಯಕಾರಿ ಸ್ಥಳಗಳಲ್ಲಿರುವಂತಹ ಜನರಿಗೆ ಸೂಕ್ತ ತಿಳುವಳಿಕೆ ನೀಡಿ ಅಲ್ಲಿನ ಜನ ಹಾಗೂ ಜಾನುವಾರುಗಳನ್ನು ಮುಂಚಿತವಾಗಿ ಸುರಕ್ಷಿತ ಸ್ಥಳಕ್ಕೆ ಸಾಗಿಸುವ ಬಗ್ಗೆ ತಾಲೂಕಾಡಳಿತವು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ಸಂದರ್ಭದಲ್ಲಿ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಎಲ್ಲಾ ತಾಲೂಕಿನ ನೋಡಲ್ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು ಕರ್ತವ್ಯ ನಿರ್ವಹಿಸಬೇಕು ಎಂದು ಡಿಸಿ ಸೂಚನೆ ನೀಡಿದ್ದಾರೆ.
ಇನ್ನು ಸಾರ್ವಜನಿಕರು, ಮೀನುಗಾರರು ಹಾಗೂ ಪ್ರವಾಸಿಗರು ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು. ಮೀನುಗಾರರು ಈ ಸಂದರ್ಭದಲ್ಲಿ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ವಹಿಸಲು ಮೀನುಗಾರಿಕೆ ಇಲಾಖೆಗೆ ಸೂಚನೆ ನೀಡಲಾಗಿದೆ. ಮಳೆ, ಗಾಳಿ ಬೀಸುವ ಸಂದರ್ಭದಲ್ಲಿ ಮಕ್ಕಳು, ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳ ಹತ್ತಿರ ಹಾಗೂ ಕೆಳಗೆ ನಿಲ್ಲದೇ, ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕು ಎಂದು ಕೋರಿದ್ದಾರೆ.
ಹೆಲ್ಪ್ ಲೈನ್ ಗೆ ಕರೆ ಮಾಡಿ
ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ತಕ್ಷಣ ಸಾರ್ವಜನಿಕರು ಜಿಲ್ಲಾಡಳಿತವನ್ನು ಸಂಪರ್ಕಿಸಬಹುದಾಗಿದೆ. ತುರ್ತು ಸೇವೆಗೆ 24×7 ಟೋಲ್ ಫ್ರೀ ಸಂಖ್ಯೆ -1077, ಲ್ಯಾಂಡ್ ಲೈನ್ ನಂ . 08382-229857 ಹಾಗೂ ವಾಟ್ಸಪ್ ನಂ: 9483511015 ಸಂಪರ್ಕಿಸುವಂತೆ ಅವರು ತಿಳಿಸಿದ್ದಾರೆ.