ಅಂತರಾಷ್ಟ್ರೀಯ ಕಡಲತೀರ ಸ್ವಚ್ಛತಾ ದಿನಾಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲು ಡಿಸಿ ಸೂಚನೆ

ಕಾರವಾರ: ನಗರದ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಅಂತರಾಷ್ಟ್ರೀಯ ಕಡಲತೀರ ಸ್ವಚ್ಛತಾ ದಿನಾಚರಣೆ ಕಾರ್ಯಕ್ರಮಕ್ಕೆ ಸೂಕ್ತ ಸ್ಥಳ ನಿಗದಿ ಪಡಿಸಿ, ಅಚ್ಚುಕಟ್ಟಾಗಿ ವೇದಿಕೆ ಸಿದ್ಧತೆ ಪಡಿಸುವುದು ಬಂದರು ಇಲಾಖೆ ಜವಾಬ್ದಾರಿ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಸಭಾಭವನದಲ್ಲಿ ನಡೆದ ಅಂತರಾಷ್ಟ್ರೀಯ ಕಡಲತೀರ ಸ್ವಚ್ಛತಾ ದಿನಾಚರಣೆ ಹಾಗೂ ಅಂತರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಆಯೋಜಿಸುವ ಕುರಿತು ಪೂರ್ವಭಾವಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಕಡಲತೀರ ಸ್ವಚ್ಚತೆಗಾಗಿ ಆಯಾ ಇಲಾಖೆಯ ಅಧಿಕಾರಿಗಳು ಇಲಾಖಾ ಸಿಬ್ಬಂದಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳ ಜನಪ್ರತಿನಿಧಿಗಳಿಂದ ಸ್ವಚ್ಛತಾ ಕಾರ್ಯ ನಿರ್ವಹಿಸಬೇಕು ಎಂದು ನಗರ ಮುನ್ಸಿಪಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇನ್ನು ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸ್ಪರ್ಧೆಗಳಿಗೆ ವಿಷಯ ವಸ್ತು ಆಯ್ಕೆ, ಕಿರುಚಿತ್ರ ಪ್ರದರ್ಶನ ಹಾಗೂ ಇತರ ಕಾರ್ಯಕ್ರಮಗಳ ವಿಷಯದ ಮಾಹಿತಿಯನ್ನು ಮೀನುಗಾರಿಕೆ ಇಲಾಖೆಯೂ ನೆಹರು ಯುವ ಕೇಂದ್ರದ ಸಹಾಯದೊಂದಿಗೆ ವಿಷಯದ ಆಯ್ಕೆ ಮಾಡಿ ಸಿದ್ಧತೆ ನಡೆಸಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸುವವರ ಸಂಖ್ಯೆ ಹಾಗೂ ಕಾರ್ಯಕ್ರಮಕ್ಕೆ ಬೇಕಾಗುವ ವಸ್ತುಗಳ ಕುರಿತು ಸಹಾಯಕ ಆಯುಕ್ತರು ಸಮಿತಿ ನಡೆಸಿ ಸಮಾಜಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ವೇದಿಕೆಯ ಕಾರ್ಯಕ್ರಮಗಳನ್ನು ಸಿದ್ಧತೆ ನಡೆಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರೀಯಾಂಗ ಎಂ. ಮಾತನಾಡಿ, ಸ್ವಚ್ಛತೆ ಕಾರ್ಯಕ್ರಮದಲ್ಲಿ ಹೆಚ್ಚು ಪ್ಲಾಸ್ಟಿಕ್ ಹಾಗೂ ಇತರ ವಸ್ತುಗಳನ್ನು ಸಂಗ್ರಹಣೆ ಮಾಡಿದ ಕಸವನ್ನು ಸ್ವಚ್ಛ ಭಾರತ ಮಿಷನ್‌ಯೋಜನೆಯಡಿಯಲ್ಲಿ ತೂಕದ ಆಧಾರದ ಮೇಲೆ ಬೆಲೆ ನಿಗದಿ ಪಡಿಸಿ ಪ್ಲಾಸ್ಟಿಕ್ ಕಸವನ್ನು ಕೊಂಡುಕೊಳ್ಳಲಾಗುವುದು ಮತ್ತು ಹೆಚ್ಚು ಕಸ ಸಂಗ್ರಹಣೆ ಮಾಡಿದವರಿಗೆ ಕಾರ್ಯಕ್ರಮದಲ್ಲಿ ಸನ್ಮಾನ ಮಾಡಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಹಾಯಕ ಆಯುಕ್ತೆ ಜಯಲಕ್ಷ್ಮೀ ರಾಯಕೋಡ, ಅಪರ ಜಿಲ್ಲಾಧಿಕಾರಿ, ಕರಾವಳಿ ಕಾವಲು ಪಡೆ ಪೊಲೀಸ್ ನೀರಿಕ್ಷಕರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.