ಬೆಂಗಳೂರು: ರಾಜ್ಯ ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಮಂಗಳವಾರ ರಾತ್ರಿ ಹೃದಯಾಘಾತದಿಂದ ಎಂ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮನೆಯಲ್ಲಿದ್ದಾಗಲೇ ಎದೆನೋವು ಕಾಣಿಸಿಕೊಂಡು ಕುಸಿದುಬಿದ್ದಿದ್ದರು. ಬಳಿಕ ಅವರನ್ನು ಎಂ ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ಆಸ್ಪತ್ರೆಗೆ ಆರೋಗ್ಯ ಸಚಿವ ಡಾ. ಸುಧಾಕರ್, ಸಚಿವ ಮುನಿರತ್ನ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಕಂದಾಯ ಸಚಿವ ಅಶೋಕ್ ಭೇಟಿ ನೀಡಿದ್ದಾರೆ. ತಮ್ಮ ಎಲ್ಲಾ ಕಾರ್ಯಕ್ರಮ ಮೊಟಕುಗೊಳಿಸಿ ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರಿನಿಂದ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಆಸ್ಪತ್ರೆಯ ಬಳಿ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ, ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರ್ಗಿ ನೇತೃತ್ವದಲ್ಲಿ ಭದ್ರತೆ ನೀಡಲಾಗಿದೆ. ಮಳೆ ಹಿನ್ನೆಲೆ ಸಿಟಿ ರೌಂಡ್ಸ್ನಲ್ಲಿದ್ದ ಸಿಎಂ ಬಸವರಾಜ ಬೊಮ್ಮಾಯಿ ಕೆಲವೇ ನಿಮಿಷಗಳಲ್ಲಿ ಆಗಮಿಸಲಿದ್ದಾರೆ.
ಬೆಳಗ್ಗೆ 9 ಗಂಟೆಗೆ ವಿಶೇಷ ವಿಮಾನದಲ್ಲಿ ಪಾರ್ಥಿವ ಶರೀರವನ್ನು ಬೆಂಗಳೂರು ನಿವಾಸದಿಂದ ಬೆಳಗಾವಿ ಏರ್‌ಪೋರ್ಟ್‌ಗೆ ರವಾನಿಸಿ ಅಲ್ಲಿಂದ ತಿಲಕವಾಡಿಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.