ದೊಡ್ಡಬಳ್ಳಾಪುರ: ಬಿಜೆಪಿಯ ‘ಜನಸ್ಪಂದನ’ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ. ರಘುನಾಥಪುರ ಗ್ರಾಮದ ಬಳಿ ಕಾರ್ಯಕ್ರಮ ಆಯೋಜಿಸಲಾಗಿದ್ದು 3 ಲಕ್ಷಕ್ಕೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈಗಾಗಲೇ ರಾಜ್ಯದ ಮೂಲೆ ಮೂಲೆಗಳಿಂದ ಕಾರ್ಯಕರ್ತರು ಆಗಮಿಸಿದ್ದು ಕೆಲವೇ ಸಮಯದಲ್ಲಿ ಕಾರ್ಯಕ್ರಮ ಪ್ರಾರಂಭವಾಗಲಿದೆ.
ಕೇಂದ್ರ ಸಚಿವೆ ಸ್ಪೃತಿ ಇರಾನಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಸಚಿವ ಸಂಪುಟದ ಸಚಿವರು, ಶಾಸಕರು ಮತ್ತು ಬಿಜೆಪಿ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಬಿಜೆಪಿ ಕಾರ್ಯಕರ್ತರು ಸಹ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸುಮಾರು 3 ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ನಗರದ ಎಲ್ಲಾ ಕಡೆ ಭರ್ಜರಿ ಬ್ಯಾನರ್ ಫ್ಲೆಕ್ಸ್ ಗಳನ್ನು ಅಳವಡಿಸಲಾಗಿದೆ. 3 ಲಕ್ಷಕ್ಕೂ ಅಧಿಕ ಕಾರ್ಯಕರ್ತರಿಗೆ ಊಟದ ವ್ಯವಸ್ಥೆ ಮಾಡಲಾಗಿದ್ದು, 200 ಎಕರೆಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ
‘ಜನಸ್ಪಂದನ’ ಕಾರ್ಯಕ್ರಮಕ್ಕೆ ಆಗಮಿಸುವ ಜನರಿಗೆ ಸುಮಾರು 1 ಸಾವಿರ ಬಾಣಸಿಗರಿಂದ ಊಟದ ತಯಾರಿ ಮಾಡಲಾಗುತ್ತಿದೆ. ಶುಕ್ರವಾರ ರಾತ್ರಿಯಿಂದಲೇ ಕಾರ್ಯಕರ್ತರಿಗೆ ಊಟದ ತಯಾರಿ ನಡೆಸಲಾಗುತ್ತಿದೆ. ವೆಜಿಟೇಬಲ್ ಪುಲಾವ್, ಮೊಸರನ್ನ ಮತ್ತು ಬದುಷಾ ತಯಾರಿಸಲಾಗುತ್ತಿದೆ. ಮಹಿಳೆ ಮತ್ತು ಪುರುಷರಿಗೆ ಪ್ರತ್ಯೇಕ ಕೌಂಟರ್ ಗಳ ನಿರ್ಮಾಣ ಮಾಡಲಾಗಿದೆ.