ಉತ್ತರ ಪ್ರದೇಶ: ಲಕ್ನೋದಲ್ಲಿ ಭಾರೀ ಮಳೆ ಸುರಿಯುತ್ತಿದೆ. ನಗರದ ಹಲವು ಭಾಗಗಳು ಜಲಾವೃತವಾಗಿದ್ದು, ಶಾಲೆಗಳನ್ನು ಮುಚ್ಚುವುದಾಗಿ ಆಡಳಿತ ಘೋಷಿಸಿದೆ. ಭಾರೀ ಮಳೆಯಿಂದಾಗಿ ಲಕ್ನೋದ ದಿಲ್ಕುಶಾ ಪ್ರದೇಶದಲ್ಲಿ ಗೋಡೆ ಕುಸಿದು 9 ಜನರು ಮೃತಪಟ್ಟಿದ್ದಾರೆ ಎಂದು ಜಂಟಿ ಪೊಲೀಸ್ ಕಮಿಷನರ್ ಪಿಯೂಷ್ ಮೊರ್ಡಿಯಾ ತಿಳಿಸಿದ್ದಾರೆ.
ಉತ್ತರ ಪ್ರದೇಶದ ಉನ್ನಾವೊದಲ್ಲಿ ನಿನ್ನೆ ತಡರಾತ್ರಿ ಸುರಿದ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಇಬ್ಬರು ಅಪ್ರಾಪ್ತರು ಸೇರಿದಂತೆ ಮೂವರು ಮೃತಪಟ್ಟು, ಒಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನುಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ ಪರಿಹಾರ ನೀಡುವಂತೆ ಸೂಚಸಿದ್ದಾರೆ.
ಹವಾಮಾನ ಇಲಾಖೆಯ ಪ್ರಕಾರ, ರಾಜ್ಯದ ಪೂರ್ವ ಭಾಗದ ಕೆಲವು ಸ್ಥಳಗಳಲ್ಲಿ ಮತ್ತು ಪಶ್ಚಿಮ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಸಿಡಿಲು, ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ರಾಜ್ಯದಲ್ಲಿ ವಾಯುಭಾರ ಕುಸಿತದಿಂದ ಕಳೆದ 24 ಗಂಟೆಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ನಾಳೆಯೂ ಸಹ ಅಬ್ಬರದ ಮಳೆಯಾಗಬಹುದೆಂದು ಹೇಳಲಾಗುತ್ತಿದೆ.