ಉಜ್ಬೇಕಿಸ್ತಾನ್: ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನುಉಜ್ಬೇಕ್ ಅಧ್ಯಕ್ಷ ಶವ್ಕತ್ ಮಿರ್ಜಿಯೋವ್ ಸ್ವಾಗತಿಸಿದ್ದಾರೆ. ಉಜ್ಬೇಕಿಸ್ತಾನ್ ನ ಸಮರ್‌ಕಂಡ್‌ನಲ್ಲಿ ನಡೆಯಲಿರುವ ಎಸ್.ಸಿ.ಓ ಶೃಂಗಸಭೆಗೆ ಪ್ರಧಾನಿ ಮೋದಿ ನಿನ್ನೆ ರಾತ್ರಿ ಉಜ್ಬೇಕಿಸ್ತಾನ್‌ನ ಸಮರ್‌ಕಂಡ್‌ಗೆ ತೆರಳಿದ್ದಾರೆ.
ಎಸ್.ಸಿ.ಓ ಶೃಂಗಸಭೆಯಲ್ಲಿ ಪ್ರಾದೇಶಿಕ ಭದ್ರತಾ ಸವಾಲುಗಳು, ವ್ಯಾಪಾರ ಮತ್ತು ಇಂಧನ ಪೂರೈಕೆಗಳನ್ನು ಉತ್ತೇಜಿಸುವುದು ಹಾಗೂ ಇತರ ವಿಷಯಗಳ ಬಗ್ಗೆ ಮಾತುಕತೆ ನಡೆಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಉಜ್ಬೇಕಿಸ್ತಾನ್ ಅಧ್ಯಕ್ಷರು ಮತ್ತು ಶೃಂಗಸಭೆಯಲ್ಲಿ ಭಾಗವಹಿಸುವ ಇತರ ಕೆಲವು ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ.
ಪ್ರಾದೇಶಿಕ ಶಾಂತಿ ಮತ್ತು ಭದ್ರತೆ, ವ್ಯಾಪಾರ ಮತ್ತು ಸಂಪರ್ಕ, ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸೇರಿದಂತೆ ಪ್ರಾದೇಶಿಕ ಮತ್ತು ಅಂತರಾಷ್ಟ್ರೀಯ ವಿಷಯಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಎಸ್.ಸಿ.ಓ ಸದಸ್ಯ ರಾಷ್ಟ್ರಗಳ ನಾಯಕರ ಜೊತೆಗೆ ಚರ್ಚೆ ನಡೆಸಲಿದ್ದಾರೆ ಎಂದು ಎಂಇಎ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದಾರೆ.