ಗಾಯಗೊಂಡು ನಿತ್ರಾಣ ಸ್ಥಿತಿಯಲ್ಲಿದ್ದ ಕಾಡುಕೋಣ ರಕ್ಷಣೆ

ಸಿದ್ದಾಪುರ: ಅರಣ್ಯ ಪ್ರದೇಶದಲ್ಲಿ ಗಾಯಗೊಂಡು ನಿತ್ರಾಣ ಸ್ಥಿತಿಯಲ್ಲಿ ಬಿದ್ದುಕೊಂಡಿದ್ದ ಕಾಡುಕೋಣವನ್ನು ರಕ್ಷಣೆ ಮಾಡಿದ ಘಟನೆ ಸಿದ್ದಾಪುರದಲ್ಲಿ ನಡೆದಿದೆ.

ತಾಲೂಕಿನ ಹೆಗ್ಗೆಕೊಪ್ಪ ಗ್ರಾಮದ ನೆಲ್ಲಿಕೊಪ್ಪ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಕಾಡುಕೋಣವೊಂದು ಗಾಯಗೊಂಡು ನಿತ್ರಾಣ ಸ್ಥಿತಿಯಲ್ಲಿ ಬಿದ್ದುಕೊಂಡಿತ್ತು. ಇದನ್ನು ಗಮನಿಸಿದ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಈ ವೇಳೆ ಶಿವಮೊಗ್ಗ ವನ್ಯಜೀವಿ ವಿಭಾಗದ ವೈದ್ಯ ಡಾ. ಮುರಳಿ ಮನೋಹರ, ಡಾ. ವಿನಯ ಅವರು ಸ್ಥಳಕ್ಕೆ ಧಾವಿಸಿ ಕಾಡುಕೋಣಕ್ಕೆ ಸೂಕ್ತ ಚಿಕಿತ್ಸೆ ನೀಡಿದ್ದಾರೆ.

ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಸಹಾಯದೊಂದಿಗೆ ಕಾಡುಕೋಣವನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಕಾಡುಕೋಣಕ್ಕೆ ಚಿಕಿತ್ಸೆ ನೀಡಿರುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಡಾ. ಅಜ್ಜಯ್ಯ, ಎಸಿಎಫ್ ಹರೀಶ್, ಪಶು ಇಲಾಖೆಯ ಡಾ. ವಿವೇಕ್ ಹೆಗಡೆ ಮತ್ತು ವಲಯ ಅರಣ್ಯ ಅಧಿಕಾರಿ ಬಸವರಾಜ್ ಸೇರಿದಂತೆ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.