ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮುಂಬರುವ ದಸರಾ ರಜೆಯ ನಂತರ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಈ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಯು.ಯು ಲಲಿತ್ ಅವರ ಮುಂದೆ ಪ್ರಸ್ತಾಪಿಸಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ದಸರಾ ವಿರಾಮದ ನಂತರ ಅದನ್ನು ಪಟ್ಟಿ ಮಾಡಲಾಗುವುದು ಎಂದು ತಿಳಿಸಿದರು. ಅಕ್ಟೋಬರ್ 3-10 ವರೆಗೂ ಒಂದು ವಾರದ ದಸರಾ ಹಬ್ಬದ ಹಿನ್ನೆಲೆಯಲ್ಲಿ ಕೋರ್ಟ್ ರಜೆಯಲ್ಲಿರಲಿದೆ.
ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ಆಗಸ್ಟ್ 2019 ರ ನಿರ್ಧಾರವನ್ನು ಪ್ರಶ್ನಿಸಿ 20 ಕ್ಕೂ ಹೆಚ್ಚು ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿವೆ. ಈ ವಿಧಿಯನ್ನು ರದ್ದುಪಡಿಸುವ ಮೂಲಕ ಕೇಂದ್ರವು ಜಮ್ಮು ಮತ್ತು ಕಾಶ್ಮೀರ ರಾಜ್ಯದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದೆ. ತರುವಾಯ, ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲಾಯಿತು. ಲಡಾಖ್, ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶವಾಗಿವೆ.
ಮಾರ್ಚ್ 2020 ರಲ್ಲಿ ಸುಪ್ರೀಂ ಕೋರ್ಟ್‌ನ 5 ನ್ಯಾಯಾಧೀಶರ ಸಂವಿಧಾನಿಕ ಪೀಠವು 370 ನೇ ವಿಧಿಯನ್ನು ಪ್ರಶ್ನಿಸುವ ಅರ್ಜಿಗಳ ಬ್ಯಾಚ್ ಅನ್ನು 7 ನ್ಯಾಯಾಧೀಶರ ಸಂವಿಧಾನ ಪೀಠಕ್ಕೆ ಉಲ್ಲೇಖಿಸುವ ಅಗತ್ಯವಿಲ್ಲ ಎಂದು ಹೇಳಿತ್ತು. ಕೆಲವು ಅರ್ಜಿದಾರರು ಸುಪ್ರೀಂಕೋರ್ಟ್‌ನ ಎರಡು ತೀರ್ಪುಗಳ ನಡುವೆ ಸಂಘರ್ಷವಿದೆ ಎಂದು ವಾದಿಸಿ 7 ನ್ಯಾಯಾಧೀಶರ ಪೀಠಕ್ಕೆ ಪ್ರಕರಣ ವರ್ಗಾಯಿಸಲು ಮನವಿ ಮಾಡಲಾಗಿತ್ತು. ಆದರೆ, ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಐವರು ನ್ಯಾಯಾಧೀಶರ ಪೀಠ, ಹಿಂದಿನ ಎರಡು ತೀರ್ಪುಗಳ ನಡುವೆ ಯಾವುದೇ ಸಂಘರ್ಷವಿಲ್ಲ ಎಂದು ಪರಿಗಣಿಸಿ ಪ್ರಕರಣವನ್ನು ದೊಡ್ಡ ಪೀಠಕ್ಕೆ ವರ್ಗಾಯಿಸಲು ನಿರಾಕರಿಸಿತು.