ಬೆಂಗಳೂರು: ದೇಶದಲ್ಲಿ ಪಿಎಫ್‌ಐ ಸಂಘಟನೆಯ ನಿಷೇಧದ ಹಿನ್ನೆಲೆ ರಾಜ್ಯದ ಸೂಕ್ಷ್ಮ ಪ್ರದೇಶಗಳಲ್ಲಿ ಬಂದೋಬಸ್ತ್ ಹೆಚ್ಚಿಸಲು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸೂಚಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಮುಸ್ಲಿಂ ಮುಖಂಡರೊಂದಿಗೆ ಸ್ಥಳೀಯವಾಗಿ ಶಾಂತಿ ಸಭೆಗಳನ್ನು ನಡೆಸಲು ಸೂಚಿಸಿದ್ದಾರೆ. ಶಾಂತಿ ಕದಡಲು ಯತ್ನಿಸುವವರನ್ನು ವಶಕ್ಕೆ ಪಡೆಯುವಂತೆ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.
ಯಾವುದೇ ಪ್ರತಿಭಟನೆ, ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಎಲ್ಲೆಡೆ ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆ, ಡಿಜೆ ಹಳ್ಳಿ, ಕೆಜಿ ಹಳ್ಳಿಯ ಸೂಕ್ಷ್ಮ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ನಿಯೋಜನೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಅಲ್ಲದೇ ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಸೂಕ್ಷ್ಮ ಜಿಲ್ಲೆಗಳಲ್ಲಿ ಪೊಲೀಸರು ತೀವ್ರ ನಿಗಾ ವಹಿಸಿದ್ದಾರೆ.