ಬೆಂಗಳೂರು: ಬಿಬಿಎಂಪಿ ವಾರ್ಡ್‌ಗಳಿಗೆ ಹೊಸದಾಗಿ ಮೀಸಲು ನಿಗದಿ ಮಾಡಲು ಸಾಧ್ಯವೇ ಎಂಬ ಬಗ್ಗೆ ನಿಲುವು ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಬಿಬಿಎಂಪಿ ವಾರ್ಡ್‌ಗಳಿಗೆ ಮೀಸಲು ನಿಗದಿಪಡಿಸಿ ಸರ್ಕಾರ ಹೊರಡಿಸಿರುವ ಅಧಿಸೂಚನೆ ರದ್ದುಪಡಿಸುವಂತೆ ಕೋರಿ ಈಜಿಪುರದ ಕೆ.ಮಹದೇವ ಮತ್ತಿತರರು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರ ಪೀಠ ಈ ಸೂಚನೆ ನೀಡಿತು.
ಒಬಿಸಿ ಅಂಕಿ ಅಂಶ ಒದಗಿಸಿ ಹೊಸದಾಗಿ ಮೀಸಲು ನಿಗದಿ ಸಾಧ್ಯವೇ.? ಹೊಸದಾಗಿ ಮೀಸಲು ನಿಗದಿಪಡಿಸಲು ಎಷ್ಟು ಕಾಲಾವಕಾಶ ಬೇಕು.? ಎಂಬ ಬಗ್ಗೆ ನಿಲುವು ತಿಳಿಸಿ ಪ್ರಮಾಣಪತ್ರ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ಸೆ.30ಕ್ಕೆ ಮುಂದೂಡಿತು. ಅಲ್ಲದೆ, ಅರ್ಜಿ ಕುರಿತ ಮುಂದಿನ ವಿಚಾರಣೆವರೆಗೆ ಚುನಾವಣಾ ವೇಳಾಪಟ್ಟಿ ಪ್ರಕಟಿಸಬಾರದು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿತು.