ಟೆಂಪೋ ಹಾಗೂ ಐರಾವತ ಬಸ್ ನಡುವೆ ಅಪಘಾತ.! 20 ಕ್ಕೂ ಹೆಚ್ಚು ಮಂದಿಗೆ ಗಾಯ, ಇಬ್ಬರು ಗಂಭೀರ.!

ಭಟ್ಕಳ: ತೆರ್ನಮಕ್ಕಿ ಚರ್ಚೆ ಸಮೀಪ ಕೆ.ಎಸ್.ಆರ್.ಟಿ.ಸಿ ವೋಲ್ವೋ ಬಸ್ ಹಾಗೂ ಮಹೀಂದ್ರಾ ಪಾಸೆಂಜರ್ ಟೆಂಪೋ ನಡುವೆ ಅಪಘಾತ ಸಂಭವಿಸಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.

ಕಾರವಾರದಿಂದ ಮಂಗಳೂರು ಕಡೆಗೆ ಹೊರಟಿದ್ದ ಐರಾವತ ಬಸ್, ಹೊನ್ನಾವರದಿಂದ ಭಟ್ಕಳ ಕಡೆಗೆ ಬರುತ್ತಿದ್ದ ಟೆಂಪೋಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಬಸ್‌ನ ಮುಂಬದಿ ಸೀಟ್‌ನಲ್ಲಿ ಕುಳಿತ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಭಟ್ಕಳದ ಸರ್ಕಾರಿ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲು ಮಾಡಲಾಗಿದೆ. ಬಸ್ ನಲ್ಲಿ 50 ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಡಿಕ್ಕಿಯ ರಭಸಕ್ಕೆ ಬಸ್ ಮುಂಭಾಗ ಎಡಬಾಗಕ್ಕೆ ಹಾಗೂ ಟೆಂಪೋ ಹಿಂಭಾಗದಲ್ಲಿ ಭಾರೀ ಹಾನಿಯಾಗಿದೆ. ಸ್ಥಳಕ್ಕೆ ಮುರುಡೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪಘಾತದ ವಿಷಯ ತಿಳಿದು ಭಟ್ಕಳ ಸಹಾಯಕ ಆಯುಕ್ತೆ ಮಮತಾ ದೇವಿ ಜಿ.ಎಸ್ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಬಂದು ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದಾರೆ. ಇನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆಯ ಅಧ್ಯಕ್ಷ ಗೋವಿಂದ ನಾಯ್ಕ ಕೂಡ ಭೇಟಿ ನೀಡಿದ್ದಾರೆ.