ಪರೇಶ್ ಮೇಸ್ತಾ ಸಾವು ಪ್ರಕರಣ: ಹತ್ಯೆಯಲ್ಲ ಸಹಜ ಸಾವು ಎಂದು ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್ ಸಲ್ಲಿಸಿದ ಸಿಬಿಐ

ಹೊನ್ನಾವರ: ಕಳೆದ ಐದು ವರ್ಷಗಳ ಹಿಂದೆ ಹೊನ್ನಾವರದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ಪರೇಶ್ ಮೇಸ್ತಾ ಸಾವಿನ ಪ್ರಕರಣದಲ್ಲಿ ಸಿಬಿಐ ‘ಬಿ’ ರಿಪೋರ್ಟ್ ಸಲ್ಲಿಸಿದೆ.

2017 ರ ಡಿಸೆಂಬರ್ 6 ರಂದು ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಮೀನುಗಾರ ಯುವಕ ಪರೇಶ್ ಮೇಸ್ತಾ ಕಾಣೆಯಾಗಿದ್ದ. 8 ರಂದು ಹೊನ್ನಾವರ ನಗರದ ಶನಿ ದೇವಸ್ಥಾನದ ಹಿಂಭಾಗದ ಶೆಟ್ಟಿ ಕೆರೆಯಲ್ಲಿ ಮೇಸ್ತಾ ಶವವಾಗಿ ಪತ್ತೆಯಾಗಿದ್ದ. ಯುವಕನನ್ನು ಅನ್ಯ ಕೋಮಿನವರು ಹತ್ಯೆ ಮಾಡಿದ್ದಾರೆಂದು ಹಿಂದೂ ಸಂಘಟನೆಗಳು ಹಾಗೂ ಬಿಜೆಪಿಗರು ಆರೋಪಿಸಿದ್ದರು. ಮೇಸ್ತಾನನ್ನು ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು, ಹಿಂದೂ ಕಾರ್ಯಕರ್ತ ಎಂದು ಬಿಂಬಿಸಿದ್ದರಿಂದ ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ ಕಾರಣವಾಗಿತ್ತು.

ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಅಂದು ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ಒತ್ತಾಯಿಸಿದ್ದವು. ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ಐವರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿತ್ತು. ವಿಸ್ತೃತ ತನಿಖೆ ನಡೆಸಿ ನಾಲ್ಕೂವರೆ ವರ್ಷದ ನಂತರ ಸಿಬಿಐ ಹೊನ್ನಾವರ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದೆ.

ಸಿಬಿಐ ಸಲ್ಲಿಸಿರುವ ವರದಿಯಲ್ಲಿ, ಪರೇಶ್ ಮೇಸ್ತಾ ಹತ್ಯೆ ನಡೆದಿಲ್ಲ. ಇದೊಂದು ಆಕಸ್ಮಿಕ ಸಾವು ಎಂದು ಅಭಿಪ್ರಾಯ ವ್ಯಕ್ತಪಡಿಸಲಾಗಿದೆ. ಇಂದು ಸಿಬಿಐ ಸಲ್ಲಿಸಿರುವ ವರದಿ ಪರಿಶೀಲಿಸಿದ ಹೊನ್ನಾವರ ನ್ಯಾಯಾಲಯ, ನವೆಂಬರ್ 16ಕ್ಕೆ ತೀರ್ಪು ಮುಂದೂಡಿದೆ.