ಜಂಬೂ ಸವಾರಿ ಮೆರವಣಿಗೆಗೆ ಸಕಲ ಸಿದ್ಧತೆ.! ಅಭೂತಪೂರ್ವ ಘಳಿಗೆಗೆ ಸಾಂಸ್ಕ್ರತಿಕ ನಗರಿ ಮೈಸೂರು ಸಜ್ಜು. !

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ‘ಜಂಬೂ ಸವಾರಿ’ ಮೆರವಣಿಗೆಗಾಗಿ ಸಾಂಸ್ಕ್ರತಿಕ ನಗರಿ ಮೈಸೂರು ಸಜ್ಜಾಗಿದೆ.

ಜಂಬು ಸವಾರಿಗೆ ಮುಖ್ಯಮಂತ್ರಿ ಚಾಲನೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಧ್ಯಾಹ್ನ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು ಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಾ ಹೊತ್ತು ತರುವ ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಗೊಳ್ಳುವ ‘ನಾಡ ದೇವತೆ’ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ಈ ಮೂಲಕ ಜಂಬೂ ಸವಾರಿ ಮೆರವಣಿಗೆಗೆ ವಿದ್ಯುಕ್ತ ಚಾಲನೆ ಸಿಗಲಿದೆ. ‘ಜಂಬೂ ಸವಾರಿ’ ಮೆರವಣಿಗೆಯನ್ನು ಕಣ್ತುಂಬಿಕೊಳ್ಳಲು ದೇಶ-ವಿದೇಶದ ಲಕ್ಷಾಂತರ ಪ್ರವಾಸಿಗರು ಪಾರಂಪರಿಕ ನಗರಿ ಮೈಸೂರಿಗೆ ಆಗಮಿಸಿದ್ದಾರೆ.

ಮಧ್ಯಾಹ್ನ 2 ಗಂಟೆ 36 ನಿಮಿಷದಿಂದ 2 ಗಂಟೆ 50 ನಿಮಿಷಕ್ಕೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅರಮನೆ ಬಲರಾಮ ದ್ವಾರದಲ್ಲಿ ಸಾಂಪ್ರದಾಯಿಕ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಿದ್ದಾರೆ. ಆ ನಂತರ ಗಜಪಡೆಯ ನಾಯಕ ಅಭಿಮನ್ಯು ಹೊತ್ತು ತರುವ 750 ಕೆ.ಜಿ.ತೂಕದ ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾನೆಗೊಳ್ಳುವ ನಾಡದೇವತೆ ತಾಯಿ ಚಾಮುಂಡೇಶ್ವರಿ ದೇವಿಗೆ ಬಸವರಾಜ ಬೊಮ್ಮಾಯಿ ಅವರು ಸಂಜೆ 5 ಗಂಟೆ 7 ನಿಮಿಷಕ್ಕೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಪುಷ್ಪಾರ್ಚನೆ ಮಾಡಲಿದ್ದಾರೆ. ಈ ಮೂಲಕ ಜಂಬೂ ಸವಾರಿ ಮೆರವಣಿಗೆಗೆ ವಿದ್ಯುಕ್ತ ಚಾಲನೆ ಸಿಗಲಿದೆ.