ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ, ನಾದಬ್ರಹ್ಮ ಹಂಸಲೇಖ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎದೆನೋವು ಕಾಣಿಸಿಕೊಂಡಿದ್ದರಿಂದ ಬೆಂಗಳೂರಿನ ರಾಜಾಜಿನಗರದಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಂಸಲೇಖ ಅವರು ಚೇತರಿಸಿಕೊಳ್ಳುತ್ತಿದ್ದು ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಈ ಹಿಂದೆ ಹಂಸಲೇಖ ಅವರು ಓಪನ್ ಹಾರ್ಟ್ ಸರ್ಜರಿ ಮಾಡಿಸಿಕೊಂಡಿದ್ದರು. ಈಗ ಒಂದು ದಿನ ವಿಶ್ರಾಂತಿ ಪಡೆಯಲು ಹಂಸಲೇಖಗೆ ವೈದ್ಯರು ಸೂಚಿಸಿದ್ದಾರೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಲ್ಲಿ ಹಂಸಲೇಖ ಉಳಿದುಕೊಂಡಿದ್ದಾರೆ.