ರಾಜ್ಯದಾದ್ಯಂತ ವರುಣನ ಆರ್ಭಟ ಮುಂದುವರಿದಿದೆ. ಅತಿವೃಷ್ಟಿಯಿಂದಾಗಿ ಮಲೆನಾಡು, ಕರಾವಳಿ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಸಾಕಷ್ಟು ಹಾನಿಯುಂಟಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೆರೆಪೀಡಿತ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಇಂದು ಮಹತ್ವದ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 1.30ಕ್ಕೆ ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಬಳ್ಳಾಪುರ, ಹಾಸನ, ಬೀದರ್, ಬೆಳಗಾವಿ, ಕಲಬುರಗಿ, ಮೈಸೂರು, ಹಾವೇರಿ, ಧಾರವಾಡ, ದಾವಣಗೆರೆ, ಯಾದಗಿರಿ, ಬಾಗಲಕೋಟೆ, ವಿಜಯಪುರ, ರಾಯಚೂರು, ವಿಜಯನಗರ, ಚಾಮರಾಜನಗರ, ಮಂಡ್ಯ ಮತ್ತು ಬಳ್ಳಾರಿ ಜಿಲ್ಲೆಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಭೆ ನಡೆಸಲಿದ್ದಾರೆ.
ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಿಎಂ ಸಭೆ ನಡೆಸಲಿದ್ದು ಮಳೆಹಾನಿ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು, ಸಂಬಧಿಸಿದ ಇಲಾಖೆಗಳ ಸಚಿವರು ಕೂಡಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.